ಮಂಗಳೂರು: ಜಾನುವಾರುಗಳನ್ನು ಹಿಂಸಾತ್ಮಕವಾಗಿ ಹಾಗೂ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಂಕನಾಡಿ ನಗರ ಪೊಲೀಸರು EICHER ಲಾರಿಯೊಂದನ್ನು ವಶಕ್ಕೆ ಪಡೆದು, 17 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ಸೆ. 22ರಂದು ಬೆಳಗಿನ ಜಾವ ಕಂಕನಾಡಿ ನಗರ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಮಾರ್ನಿಂಗ್ ರೌಂಡ್ಸ್‌ನಲ್ಲಿದ್ದ ವೇಳೆ, ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು ವಾಹನಕ್ಕಾಗಿ ಕಾಯುತ್ತಿದ್ದಾಗ, ಸುಮಾರು ಬೆಳಗ್ಗೆ 6.30ಕ್ಕೆ ಆಡ್ಯಾರು ಕಡೆಯಿಂದ ಮಂಗಳೂರು ನಗರದತ್ತ ಬರುತ್ತಿದ್ದ ಕಂದು ಬಣ್ಣದ EICHER ಲಾರಿ ಕಂಡುಬಂದಿದೆ.
ಪೊಲೀಸರು ಲಾರಿಯನ್ನು ಬೆನ್ನಟ್ಟಿ ಪಡೀಲ್ ಟೊಯೋಟಾ ಕಾರ್ ಶೋರೂಮ್ ಎದುರು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಚಾಲಕ ಲಾರಿಯಲ್ಲೇ ಇದ್ದು, ಮತ್ತೊಬ್ಬ ವ್ಯಕ್ತಿ ವಾಹನದಿಂದ ಇಳಿದು ಪರಾರಿಯಾಗಿದ್ದಾನೆ. ಬಂಧಿತ ಚಾಲಕನನ್ನು ಸಾದಿಕ್ ಜಿ., 23 ವರ್ಷ, ಹಾಸನ ಜಿಲ್ಲೆಯ ವಿಶ್ವನಾಥನಗರ ಲೇಔಟ್ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಲಾರಿಯ ಬಾಡಿಯನ್ನು ಹಸಿರು ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು. ಪರಿಶೀಲನೆ ವೇಳೆ ಒಟ್ಟು 17 ಜಾನುವಾರುಗಳು ಪತ್ತೆಯಾಗಿವೆ. ಜಾನುವಾರುಗಳನ್ನು ಸೂಕ್ತ ಸುರಕ್ಷತಾ ಕ್ರಮಗಳಿಲ್ಲದೆ, ಬಿಗಿಯಾಗಿ ಹಗ್ಗಗಳಿಂದ ಲಾರಿಯ ಕಬ್ಬಿಣದ ಕ್ಯಾರೇಜ್‌ಗಳಿಗೆ ಕಟ್ಟಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11(A), 11(D), ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯ ಸೆಕ್ಷನ್ 6 ಹಾಗೂ BNS ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದಲ್ಲಿ 17 ಜಾನುವಾರುಗಳು, EICHER ಲಾರಿ ಹಾಗೂ ಆರೋಪಿ ಸಾದಿಕ್‌ನ ಮೊಬೈಲ್ ಫೋನ್ ಸೇರಿದಂತೆ ಸಂಬಂಧಿತ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾದಿಕ್‌ನನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಸುಬಾನ್ ಮತ್ತು ರೆಹಮಾನ್ ಅವರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

























