ಮಂಗಳೂರು:ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 23.20 ಗ್ರಾಂ ಎಂಡಿಎಂಎ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ಸೆ. 23ರಂದು ನಡೆದಿದೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ಮೇರಮಜಲು ಗ್ರಾಮದ ನಿವಾಸಿ ಸುಭಾಶ್ (36) ಎಂದು ಗುರುತಿಸಲಾಗಿದೆ.
ವಿಶ್ವಾಸಾರ್ಹ ಮೂಲದಿಂದ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಸೆ. 23ರ ಸಂಜೆ ಕಾರ್ಯಾಚರಣೆ ನಡೆಸಿದ್ದರು. ಮಂಗಳೂರು ತಾಲೂಕು ಅರ್ಕುಳ ಜಂಕ್ಷನ್ ಬಳಿಯ ಯಶಸ್ವಿ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿ-73ರ ಬದಿಯಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡಲು ಕಾಯುತ್ತಿದ್ದ ವೇಳೆ ಸುಭಾಶ್‌ನನ್ನು ಬಂಧಿಸಲಾಗಿದೆ.
ಆತನ ವಶದಿಂದ ಸುಮಾರು ₹1.15 ಲಕ್ಷ ಮೌಲ್ಯದ 23.20 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್‌ಗಳು ಹಾಗೂ ತೂಕ ಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ವಸ್ತುಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 133/2026ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c), 22(c) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಾದಕ ದ್ರವ್ಯ ಮಾರಾಟ ಜಾಲದ ಹಿಂದೆ ಇರುವವರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಬಂಧಿತ ಸುಭಾಶ್ ವಿರುದ್ಧ ಈ ಹಿಂದೆಯೂ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅ.ಕ್ರ. 88/2026ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c), 22(b) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾದಕ ದ್ರವ್ಯಗಳ ಅಕ್ರಮ ಮಾರಾಟ ಹಾಗೂ ಬಳಕೆಯ ಕುರಿತು ಸಾರ್ವಜನಿಕರು, ವಿಶೇಷವಾಗಿ ವಿದ್ಯಾರ್ಥಿಗಳು, ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆಗೆ ತಿಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

























