ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ನಿವಾಸಿ ಪ್ರಶಾಂತ್ ಬೆಳ್ಚಾಡ್ (41) ಎಂಬವರು ಸೆ.20ರಂದು ಸಂಜೆ ಕಮ್ಮಾಜೆಯಲ್ಲಿ ಇದ್ದಾಗ, ಆಟೋರಿಕ್ಷಾದಲ್ಲಿ ಬಂದ ಪರಿಚಯದವರಾದ ಅಮ್ಮುಂಜೆ ನಿವಾಸಿ ಪ್ರಶಾಂತ್ (38), ತೆಂಕಬೆಳ್ಳೂರು ನಿವಾಸಿ ರಾಮದಾಸ್ (43) ಹಾಗೂ ಬಡಗಬೆಳ್ಳೂರು ನಿವಾಸಿ ಶಂಕರ (45) ಎಂಬವರು ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ಪ್ರಶಾಂತ್ ಬೆಳ್ಚಾಡ್ ಅವರಿಗೆ ತೀವ್ರ ರಕ್ತಗಾಯವಾಗಿದ್ದು, ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭ ಪರಿಚಯದವರು ಸ್ಥಳಕ್ಕೆ ಬರುತ್ತಿರುವುದನ್ನು ಕಂಡ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ.124/2026ರಂತೆ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 109, 352, 351 ಹಾಗೂ 3(5)ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಪ್ರಶಾಂತ್, ರಾಮದಾಸ್ ಹಾಗೂ ಶಂಕರ ಅವರನ್ನು ಬಂಧಿಸಿ ಸೆ.25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.



























