ಪುತ್ತೂರು:ಪೋಕ್ಸೋ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಅದ್ದು ಪಡೀಲ್ ಯಾನೆ ಅದ್ರಾಮ್ ಎಂಬಾತನಿಗೆ ಪುತ್ತೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ.
ಆ.23ರಂದು ಬಪ್ಪಳಿಗೆಯಲ್ಲಿ ನಡೆದ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಆರೋಪಿಯು ತನ್ನ ಮಗಳು ಹಾಗೂ ಸಂತ್ರಸ್ತೆಯನ್ನು ಕರೆದುಕೊಂಡು ಹೋಗಿದ್ದು ಅಲ್ಲಿಂದ ರಾತ್ರಿ ಹಿಂತಿರುಗಿ ಬಂದು ಮಗಳನ್ನು ಮನೆಯಲ್ಲಿ ಬಿಟ್ಟು ಸಂತ್ರಸ್ತೆಯನ್ನು ಆಕೆಯ ಮನೆಗೆ ಕರೆದುಕೊಂಡು ಹೋಗುವಾಗ ಆಕೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಈ ವಿಚಾರವನ್ನು ಯಾರಲ್ಲಿಯಾದರೂ ಹೇಳಿದರೆ ಮುಂದಕ್ಕೆ ಶಾಲೆಗೆ ಬಿಡುವುದಿಲ್ಲ ಎಂದು ಹೆದರಿಸಿದ್ದಾಗಿ ಆರೋಪಿಸಿ ಸಂತ್ರಸ್ತೆಯ ತಾಯಿ ಆ.24ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಆರೋಪಿ ಅದ್ದು ಪಡೀಲ್ ನಿರೀಕ್ಷಣಾ ಜಾಮೀನು ಕೋರಿ ಪುತ್ತೂರಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಮತಿ ಸುಮಂಗಲ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಸೆ.25ರಂದು ಆದೇಶಿಸಿದ್ದಾರೆ. ಆರೋಪಿ ಪರ ವಕೀಲ ಮಹೇಶ್ ಕಜೆ ವಾದಿಸಿದ್ದರು.



























