ಮಂಗಳೂರು: ನಗರದ ಬರ್ಕೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಪೊಲೀಸರು ಬಂಧಿಸಿದ್ದು, ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸೆ.28ರಂದು ಮಧ್ಯಾಹ್ನ ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದಕ್ಕೆ ಬೀಗ ಹಾಕಿ ಮನೆಯವರು ಹೊರಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿ ಮುರಿದು ಕಳ್ಳರು ಒಳನುಗ್ಗಿರುವುದು ಪತ್ತೆಯಾಗಿತ್ತು. ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಸೊತ್ತುಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದಕ್ಕೆ ನುಗ್ಗಿದ್ದ ಕಳ್ಳರು ಲಾಕರ್ ಒಡೆದು ಪರಿಶೀಲಿಸಿದ್ದು, ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಮನೆಗಳ್ಳತನದ ಬಳಿಕ ಆರೋಪಿಗಳು ರೈಲಿನಲ್ಲಿ ದೆಹಲಿ ಕಡೆಗೆ ತೆರಳುತ್ತಿರುವುದು ಪತ್ತೆಯಾಗಿದ್ದು, ವಡೋದರಾ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು.
ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗೆ, ಸೆ.29ರಂದು ಗುಜರಾತ್‌ನ ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಲಾಗಿದ್ದು, ಇದರ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತರನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
40ಕ್ಕೂ ಅಧಿಕ ಮನೆಗಳ್ಳತನ ಪ್ರಕರಣ: ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿವೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಬಂಧಿತ ಆರೋಪಿಗಳು:
- ಅರ್ಮಾನ್ ಖಾನ್ @ ಅಮನ್ ಸೋನಿ (34) — ಶೋಕಿನ್ ಅವರ ಪುತ್ರ, ಗೋಕುಲ್ ಪುರಿ, ಈಶಾನ್ಯ ದೆಹಲಿ.
- ಸಂಜೀವ್ ಕುಮಾರ್ @ ಜಾನಿ (34) — ವಿಷ್ಣು ಜಾಟ್ ಅವರ ಪುತ್ರ, ಸುಲ್ತಾನ್ ಪುರಿ, ನವದೆಹಲಿ.



























