ಪುತ್ತೂರು: ನ್ಯಾಯಾಲಯದ ಕಲಾಪದ ವೇಳೆ ಪೊಲೀಸರ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು ಎರಡು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ.
ಪುತ್ತೂರು ಸಿರಿ ಬಾಗಿಲು ನಿವಾಸಿ ಜಯೇಶ್ ಅಲಿಯಾಸ್ ಜಯೇಶ್ ಕಾಂತ್ ಎಸ್., ಶಾಹಿರ್ ಅಲಿಯಾಸ್ ಶಾಕಿರ್ (41) ಶಿಕ್ಷೆಗೊಳಗಾದ ಆರೋಪಿ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 120/2008ರ ಕಲಂ 450, 302, 201 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಶಾಕಿರ್‌ನನ್ನು 2016ರ ಏಪ್ರಿಲ್ 5ರಂದು ಮಂಗಳೂರು ಕಾರಾಗೃಹದಿಂದ ವಿಚಾರಣೆಗಾಗಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ನ್ಯಾಯಾಲಯದಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಏಕಾಏಕಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 91/2016ರಂತೆ ಕಲಂ 224 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ್ ಅವರು ಅ.5ರಂದು ಆರೋಪಿಗೆ ಎರಡು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಅಂದಿನ ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಖಾದರ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಕಾನೂನು ಅಭಿಯೋಜಕ ಮನೋಜ್ ಕುಮಾರ್ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.



























