ಪುತ್ತೂರು: ನಗರಸಭೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳು ಹಾಗೂ ರಸ್ತೆ ಬದಿಗಳಲ್ಲಿ ಅಳವಡಿಸಲಾಗಿರುವ ಅನಧಿಕೃತ ಬ್ಯಾನರ್, ಫ್ಲೆಕ್ಸ್ ಮತ್ತು ಧ್ವಜಪತಾಕೆಗಳನ್ನು ತೆರವುಗೊಳಿಸಲು ಪುತ್ತೂರು ನಗರಸಭೆ ಹಾಗೂ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಕಾರ್ಯಾಚರಣೆಗೆ ಮುಂದಾಗಿದೆ.
ನಗರದ ಸೌಂದರ್ಯ ಕಾಪಾಡುವುದರ ಜೊತೆಗೆ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಉಂಟಾಗಬಹುದಾದ ಅಪಾಯಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ಬ್ಯಾನರ್, ಫ್ಲೆಕ್ಸ್ ಅಥವಾ ಹೋರ್ಡಿಂಗ್ಸ್ ಅಳವಡಿಸುವ ಮುನ್ನ ನಗರಸಭೆಯಿಂದ ಪೂರ್ವಾನುಮತಿ ಪಡೆದು, ನಿಗದಿತ ಶುಲ್ಕ ಪಾವತಿಸುವುದು ಕಡ್ಡಾಯವಾಗಿದೆ. ಅನುಮತಿ ಇಲ್ಲದೆ ಬ್ಯಾನರ್ ಅಥವಾ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ, ಸಾರ್ವಜನಿಕ ಆಸ್ತಿಗೆ ಹಾನಿ ಉಂಟುಮಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಅನಧಿಕೃತ ಫಲಕಗಳನ್ನು ನಗರಸಭೆ ಸಿಬ್ಬಂದಿ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
ಅದೇ ರೀತಿ ವಿದ್ಯುತ್ ಕಂಬಗಳು, ಪ್ರಮುಖ ಜಂಕ್ಷನ್‌ಗಳು ಹಾಗೂ ವಾಹನ ಸವಾರರ ದೃಷ್ಟಿಗೆ ಅಡ್ಡಿಯಾಗುವ ಸ್ಥಳಗಳಲ್ಲಿ ಬ್ಯಾನರ್, ಫ್ಲೆಕ್ಸ್ ಅಳವಡಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಎಚ್ಚರಿಸಿದೆ.


























