ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ವೀಕೃತವಾಗಿರುವ ದೂರು ಅರ್ಜಿಗಳ ಪರಿಶೀಲನೆ ಅ.16ರಂದು ಬೆಳಿಗ್ಗೆ 11 ಗಂಟೆಗೆ ದೇವಸ್ಥಾನದಲ್ಲಿ ನಡೆಯಲಿದೆ.
ದೂರು ಅರ್ಜಿಗಳ ಪರಿಶೀಲನೆಗಾಗಿ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ದೇವಸ್ಥಾನಕ್ಕೆ ಖುದ್ದು ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ (ಇಒ), ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ದೂರುದಾರರು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ. ಅಲ್ಲದೆ, ದೂರಿಗೆ ಸಂಬಂಧಿಸಿದ ಲಿಖಿತ ಹೇಳಿಕೆಗಳು ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ.
ದೇವಸ್ಥಾನದ ಕಾಮಗಾರಿಗಳ ಕುರಿತು ಸ್ವೀಕೃತವಾಗಿರುವ ದೂರನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಸೆ.25ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ದೇವಳದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ದೂರುದಾರರಿಗೆ ಈ ಹಿಂದೆ ತಿಳಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಅಂದು ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ.
ಇದೀಗ ವಿಚಾರಣೆಗೆ ಅ.16ರಂದು ದಿನಾಂಕ ನಿಗದಿಪಡಿಸಲಾಗಿದ್ದು, ಅಂದು ದೂರು ಅರ್ಜಿಗಳ ಕುರಿತು ಪರಿಶೀಲನೆ ನಡೆಯಲಿದೆ.



























