ಪುತ್ತೂರು: ಪಿಕಪ್ ವಾಹನದಲ್ಲಿ ಕೇರಳದ ಕಡೆಗೆ ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿದ್ದ ಪ್ರಕರಣದಲ್ಲಿ ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ್ದ ಆರೋಪಿಯಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್ ಎಂಬಾತನ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದ್ದ ಮಾಹಿತಿಯ ಮೇರೆಗೆ ಅ.5ರಂದು ಬೆಳಿಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸುಷ್ಮಾ ಜಿ.ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಅದರ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಯಾವುದೇ ಅಗತ್ಯ ಪರವಾನಿಗೆ ಹೊಂದಿರದೆ, ಜಾನುವಾರುಗಳನ್ನು ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದತ್ತ ಸಾಗಿಸಲಾಗುತ್ತಿತ್ತು ಎಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ಮುಂದುವರಿಸಿದ್ದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ್ದ ಆರೋಪದ ಮೇರೆಗೆ ಆರ್ಯಾಪು ನಿವಾಸಿ ಶಿವಪ್ರಸಾದ್ ಎಂಬಾತನನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವನ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದ ಪೊಲೀಸರು ಮುಡಿಪು ನಿವಾಸಿ ಮಾಶಿಕ್ ಮತ್ತು ಬಂಟ್ವಾಳ ಪೇರಮುಗೇರು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಎಂಬೀರ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣದಲ್ಲಿ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ್ದ ಆರೋಪಿ ಶಿವಪ್ರಸಾದ್ ಎಂಬಾತ ಆರ್ಯಾಪು ಗ್ರಾಮದ ದೇವಸ್ಯದಲ್ಲಿ ಹೊಂದಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿರುವುದಾಗಿ ತಿಳಿದುಬಂದಿದೆ.



























