ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾಗೂ ಮತ್ತೊಂದು ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57) ಬಂಧಿತ ಆರೋಪಿ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2009ರಲ್ಲಿ ದಾಖಲಾಗಿದ್ದ ಕೆಇ ಕಾಯ್ದೆಯ ಪ್ರಕರಣದಲ್ಲಿ ಆರೋಪಿಯಾಗಿದ್ದ ಹನೀಫ್, ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, 2023ರಲ್ಲಿ ದಾಖಲಾಗಿದ್ದ ಹಲ್ಲೆ, ಮನೆಗೆ ಅಕ್ರಮ ಪ್ರವೇಶ, ಆಸ್ತಿ ಹಾನಿ, ಬೆಂಕಿ ಹಚ್ಚುವುದು ಹಾಗೂ ಕೊಲೆ ಯತ್ನ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿಯೂ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅ. 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್ ಜಗದೀಶ್, ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



























