ಪುತ್ತೂರು: ನಗರದ ಮುಖ್ಯ ರಸ್ತೆಯಲ್ಲಿರುವ ಸೋಜಾ ಅಲ್ಯೂಮಿನಿಯಂ ಅಂಗಡಿಯ ಮುಂಭಾಗದ ಹಳೆಯ ಕಟ್ಟಡವೊಂದರಲ್ಲಿ ಭಾನುವಾರ ಮುಂಜಾನೆ ಸುಮಾರು 3 ಗಂಟೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
ಈ ವೇಳೆ ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೋಟರಿ ಕ್ಲಬ್ ಪುತ್ತೂರು ಈಸ್ಟ್‌ನ ಅಧ್ಯಕ್ಷ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ನಿರ್ದೇಶಕ ರವಿಕುಮಾರ್ ರೈ ಕೆದಂಬಾಡಿ ಮಠ ಅವರು ಮಾರ್ಗಮಧ್ಯೆ ಕಟ್ಟಡದಲ್ಲಿ ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ್ದಾರೆ.
ತಕ್ಷಣ ಕಾರ್ಯಪ್ರವೃತ್ತರಾದ ಅವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಲ್ಲದೆ, ಪುತ್ತೂರು ನಗರ ಪೊಲೀಸ್ ಠಾಣೆಗೂ ತೆರಳಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಕೆಲವೇ ಹೊತ್ತಿನಲ್ಲಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದರು. ಮುಂಜಾನೆಯ ವೇಳೆಯಲ್ಲಿ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಸಮಯಪ್ರಜ್ಞೆ ಮೆರೆದ ರವಿಕುಮಾರ್ ರೈ ಅವರು ತಕ್ಷಣ ಮಾಹಿತಿ ನೀಡಿದ್ದರಿಂದ ಅಗ್ನಿಶಾಮಕ ದಳದವರು ಶೀಘ್ರವಾಗಿ ಕಾರ್ಯಾಚರಣೆ ನಡೆಸಲು ಸಾಧ್ಯವಾಯಿತು. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.


























