ಮಂಗಳೂರು: ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಅ.12ರಂದು ಈ ಘಟನೆ ನಡೆದಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿವಲಿಂಗಪ್ಪ (40) ಎಂಬಾತ ತನ್ನ ಪತ್ನಿ ಸೋನಾಲಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 138/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 103(2) ಮತ್ತು 238ರಂತೆ ಪ್ರಕರಣ ದಾಖಲಾಗಿದೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಾರ್ಕಬನಹಳ್ಳಿ ನಿವಾಸಿ ಶಿವಲಿಂಗಪ್ಪನನ್ನು ಅ.12ರಂದು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.


























