ಮಂಗಳೂರು: ತೋಟಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಹಿಂಭಾಗದ ಸಮುದ್ರ ಕಿನಾರೆಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಪ್ರಕರಣದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಭಾಗಲಕೋಟೆ ಮೂಲದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ (39) ಕೊಲೆಯಾದವರು. ಈ ಪ್ರಕರಣದ ಆರೋಪಿ ತೋಟಬೆಂಗ್ರೆಯ ನಿವಾಸಿ ಧರ್ಮರಾಜ್ ಸುವರ್ಣ (50).
2024ರ ಸೆ.21ರಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ತೋಟಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಹಿಂಭಾಗದ ಸಮುದ್ರ ಕಿನಾರೆಯಲ್ಲಿ ಮುತ್ತು ಬಸವರಾಜ ವಡ್ಡರ್ ಅವರ ಕೊಲೆ ನಡೆದಿತ್ತು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಧರ್ಮರಾಜ್ ಸುವರ್ಣ ಮತ್ತು ಮೃತ ಮುತ್ತು ಬಸವರಾಜ ಪರಸ್ಪರ ಪರಿಚಿತರಾಗಿದ್ದರು. ಧರ್ಮರಾಜ್ ಸುವರ್ಣ ಇತ್ತೀಚೆಗೆ ಹೊಸ ಮೊಬೈಲ್ ಖರೀದಿಸಿದ್ದು, ಅದನ್ನು ಮುತ್ತು ಬಸವರಾಜ ತೆಗೆದುಕೊಂಡು ಹಿಂತಿರುಗಿಸದೆ, ಮೊಬೈಲ್ ಹಾಳು ಮಾಡಿದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಧರ್ಮರಾಜ್ ಸುವರ್ಣ ಮರದ ಸೋಂಟೆಯಿಂದ ಹೊಡೆದು ಮುತ್ತು ಬಸವರಾಜ ಅವರನ್ನು ಕೊಲೆ ಮಾಡಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು.
ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು 2024ರ ಸೆ.26ರಂದು ಬೆಳಗಿನ ಜಾವ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಚೊಂಪಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ಅವರು ಅ.12ರಂದು ಆರೋಪಿ ಧರ್ಮರಾಜ್ ಸುವರ್ಣನಿಗೆ ಭಾರತೀಯ ನ್ಯಾಯ ಸಂಹಿತೆಯ ಕಲಂ 103(1)ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಆರು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.
ಪ್ರಕರಣದ ಆರಂಭಿಕ ತನಿಖೆಯನ್ನು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮೊಹಮ್ಮದ್ ಸಲೀಂ ಅಬ್ಬಾಸ್ ನಡೆಸಿದ್ದರು. ಬಳಿಕ ಎಸ್‌ಸಿ-ಎಸ್‌ಟಿ ಕಾಯ್ದೆಯ ಕಲಂಗಳನ್ನು ಸೇರ್ಪಡೆಗೊಳಿಸಿದ ಹಿನ್ನೆಲೆಯಲ್ಲಿ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀಕಾಂತ್ ಕೆ. ಅವರು ಮುಂದಿನ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ ನಾಯಕ ವಾದ ಮಂಡಿಸಿದ್ದರು.


























