ಮಂಗಳೂರು: ನಗರದ ಚರ್ಚ್ನ ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯು ಪ್ರಾರ್ಥನೆಗಾಗಿ ಚರ್ಚ್ಗೆ ಬರುತ್ತಿದ್ದ ಅಪ್ರಾಪ್ತ ಬಾಲಕನಿಗೆ ಚಾಕಲೇಟ್ ನೀಡಿ, ಪ್ರೀತಿಯ ಮಾತುಗಳಿಂದ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ.
ಆಗಸ್ಟ್ 14ರಂದು ಸಂಜೆ ಸುಮಾರು 6.30ರ ವೇಳೆಗೆ ಬಾಲಕ ಚರ್ಚ್ಗೆ ಪ್ರಾರ್ಥನೆಗೆ ತೆರಳಿದ್ದಾಗ, ರಿಸೆಪ್ಷನಿಸ್ಟ್ ಕೊಠಡಿಗೆ ಕರೆಸಿಕೊಂಡ ಫಾದರ್, ಬಾಲಕನನ್ನು ಗಟ್ಟಿಯಾಗಿ ತಬ್ಬಿಕೊಂಡು ಪ್ಯಾಂಟ್ ಒಳಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೂ ಮೊದಲು ಚರ್ಚ್ನ ಸಕ್ರಿಸ್ಟಿ ಕೊಠಡಿಯ ಬಳಿಯಿದ್ದ ಮತ್ತೊಂದು ಕೊಠಡಿಗೆ ಕರೆಸಿಕೊಂಡು ಅಸಭ್ಯವಾಗಿ ವರ್ತಿಸಿದ್ದಲ್ಲದೆ, ನಂತರದ ದಿನಗಳಲ್ಲಿಯೂ ಇದೇ ರೀತಿಯ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ಬಾಲಕ ತನ್ನ ಸ್ನೇಹಿತರೊಂದಿಗೆ ವಿಚಾರಿಸಿದಾಗ, ಅವರಿಗೂ ಇದೇ ರೀತಿಯ ಕಿರುಕುಳ ನೀಡಿರುವುದಾಗಿ ತಿಳಿದುಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ನಿರಂತರ ಕಿರುಕುಳದಿಂದ ಭಯಗೊಂಡಿದ್ದ ಬಾಲಕ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದಾನೆ. ಬಳಿಕ ಪೋಷಕರೊಂದಿಗೆ ಬಿಷಪ್ ಅವರನ್ನು ಭೇಟಿಯಾಗಿ ವಿಷಯ ತಿಳಿಸಿದಾಗ, ಪೊಲೀಸರಿಗೆ ದೂರು ನೀಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಸಂಬಂಧ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯ ಕಲಂ 8, 10 ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಲಂ 75(2)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


























