ಪುತ್ತೂರು: ಮಹಿಳೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶಿಸಿದೆ.
2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ತಕರಾರು ನಡೆದಿದ್ದು, ಈ ವೇಳೆ ಮೂವರು ಆರೋಪಿಗಳು ಮಹಿಳೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ್ದರು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪೊಲೀಸ್ ಸಿಬ್ಬಂದಿ ಸುಬ್ರಮಣ್ಯ ಹೆಚ್. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ, ಆರೋಪಿಗಳಾದ ಅರುಣ್ ಕುಮಾರ್, ವಿನಯ ಕುಮಾರ್ ಜಿ. ಹಾಗೂ ಸುಂದರ ಪಿ.ಎಂ. ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ ಎಎಸ್ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ದೇವರಾಜ್ ವೈ.ಎಚ್. ಅವರು ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.
ಪ್ರಥಮ ಆರೋಪಿ ಅರುಣ್ ಕುಮಾರ್ಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323ರಡಿ ಆರು ತಿಂಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ ಸೆಕ್ಷನ್ 354ರಡಿ ಎರಡು ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಮೂರು ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಲಾಗಿದೆ.
ಇನ್ನು, ಮೂವರು ಆರೋಪಿಗಳಿಗೂ ಐಪಿಸಿ ಸೆಕ್ಷನ್ 506ರಡಿ ತಲಾ ಒಂದು ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ ತಲಾ 5 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಮೂರು ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಚೇತನಾದೇವಿ ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.


























