ಮಂಗಳೂರು: ಎಂಆರ್ಪಿಎಲ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಕಳೆದ 18 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಮಿಕ ರಾಜೇಶ್ ಡಿಸಿಲ್ವ (38) ಅವರು ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸೆ. 30ರಂದು ಎಂಆರ್ಪಿಎಲ್ನ ಘಟಕವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ರಾಜೇಶ್ ಡಿಸಿಲ್ವ ಅವರು ಶೇ. 35ರಷ್ಟು ಸುಟ್ಟ ಗಾಯಗಳಿಗೆ ಒಳಗಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಸುರತ್ಕಲ್ನ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದ ರಾಜೇಶ್ ಅವರು ಹಲವು ವರ್ಷಗಳಿಂದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ಅವರು ಸ್ಫೋಟ ಸಂಭವಿಸಿದ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಈ ಸ್ಫೋಟ ಸಂಭವಿಸಿದ ದಿನವೇ ಗುತ್ತಿಗೆ ಕಾರ್ಮಿಕ ಮನೀಶ್ ಕರ್ಕೇರ ಅವರು ಸ್ಥಳದಲ್ಲೇ ಸುಟ್ಟು ಮೃತಪಟ್ಟಿದ್ದರು. ಇದೀಗ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್ ಅವರೂ ಮೃತಪಟ್ಟಿದ್ದು, ಘಟನೆಯಲ್ಲಿ ಮೃತಪಟ್ಟ ಕಾರ್ಮಿಕರ ಸಂಖ್ಯೆ ಎರಡಕ್ಕೇರಿದೆ.
























