ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ 7 ಅಂಕದ ಕೋಳಿಗಳು, 3 ದ್ವಿಚಕ್ರ ವಾಹನಗಳು ಹಾಗೂ ಒಂದು ಆಟೋರಿಕ್ಷಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ದಿನಾಂಕ 18.10.2026ರಂದು ಮಧ್ಯಾಹ್ನ ಅಂಡಿಂಜೆ ಗ್ರಾಮದ ಕಾಣಲಚ್ಚಿ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸಲಾಗುತ್ತಿದೆ ಎಂಬ ಮಾಹಿತಿ ವೇಣೂರು ಪೊಲೀಸ್ ಠಾಣೆಯ ಪಿಎಸ್ಐ ಅಕ್ಷಯ ಡವಗಿ ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪಿಎಸ್ಐ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿರುವುದು ದೃಢಪಟ್ಟಿದೆ. ಪೊಲೀಸರು ದಾಳಿ ನಡೆಸುತ್ತಿದ್ದಂತೆ ಸ್ಥಳದಲ್ಲಿದ್ದ ಆರೋಪಿಗಳು ಓಡಿಹೋಗಲು ಯತ್ನಿಸಿದ್ದು, ಅವರ ಪೈಕಿ ನಾಲ್ವರನ್ನು ಹಿಡಿದು ವಿಚಾರಣೆ ನಡೆಸಲಾಗಿದೆ.ವಶಕ್ಕೆ ಪಡೆದವರನ್ನು ಮೋಹನ ಗೌಡ (45), ದಿನೇಶ್ (45), ಪ್ರಶಾಂತ್ (35) ಹಾಗೂ ಧೀರಜ್ ಎಂದು ಗುರುತಿಸಲಾಗಿದೆ.
ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 72/2026ರಂತೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87 ಮತ್ತು 93, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960ರ ಕಲಂ 3, 11(1)(m)(ii) ಹಾಗೂ 11(1)(n), ಮತ್ತು ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 112ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


























