ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ.
ಮೃತರನ್ನು ಮರ್ಸಿ ಮಸ್ಕರೇನಸ್ (45) ಹಾಗೂ ಅವರ ಪುತ್ರ ಶೋನ್ ಮಸ್ಕರೇನಸ್ (18) ಎಂದು ಗುರುತಿಸಲಾಗಿದೆ.
ಗುರುವಾರ ಬೆಳಗ್ಗೆ 7ರಿಂದ 8 ಗಂಟೆಯ ನಡುವೆ ಮನೆಯ ಬಳಿ ಬಟ್ಟೆ ಒಣಗಿಸಲು ಹಾಕುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಬಟ್ಟೆ ಒಣಗಿಸಲು ಬಳಸುತ್ತಿದ್ದ ತಂತಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿದ ಪರಿಣಾಮ ವಿದ್ಯುತ್ ಪ್ರವಹಿಸಿದೆ. ಈ ವೇಳೆ ವಿದ್ಯುತ್ ಆಘಾತಕ್ಕೆ ಒಳಗಾದ ಪುತ್ರ ಶೋನ್ನನ್ನು ರಕ್ಷಿಸಲು ಮುಂದಾದ ತಾಯಿ ಮರ್ಸಿ ಅವರಿಗೂ ವಿದ್ಯುತ್ ತಗುಲಿ ಇಬ್ಬರೂ ಮೃತಪಟ್ಟಿದ್ದಾರೆ.
ಮೃತ ಶೋನ್ ಮಸ್ಕರೇನಸ್ ಮೂಡುಬಿದಿರೆಯ ಹೋಲಿ ರೋಸರಿ ಶಾಲೆಯ ವಿದ್ಯಾರ್ಥಿಯಾಗಿದ್ದರು ಎಂದು ತಿಳಿದುಬಂದಿದೆ.
ತೋಟದ ಕೆಲಸಕ್ಕೆ ಬಂದಿದ್ದ ಕಾರ್ಮಿಕನ ಗಮನಕ್ಕೆ ಘಟನೆ ಬಂದಿದ್ದು, ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.
ಒಂದೇ ಕುಟುಂಬದ ತಾಯಿ ಮತ್ತು ಮಗನನ್ನು ಬಲಿ ಪಡೆದ ಈ ದುರಂತ ಸ್ಥಳೀಯರಲ್ಲಿ ದುಃಖ ಮೂಡಿಸಿದೆ.


























