ಮೈಸೂರು: ಕರ್ನಾಟಕ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣವು ಸಿದ್ದರಾಮಯ್ಯ ಅವರ ತೇಜೋವಧೆ ಮಾಡಲು ಮತ್ತು ಬ್ಲಾಕ್ಮೇಲ್ ಮಾಡುವ ಉದ್ದೇಶದಿಂದ ನಡೆಸಿದ ಸಂಚು. ಇದರಲ್ಲಿ ನಮ್ಮ ಪಕ್ಷದವರೂ (ಕಾಂಗ್ರೆಸ್) ಶಾಮೀಲಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಪೊಲೀಸರು ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಒಂದು ವೇಳೆ ತನಿಖೆ ನಿರೀಕ್ಷಿತ ಮಟ್ಟದಲ್ಲಿ ನಡೆಯದಿದ್ದರೆ, ಮುಂದಿನ ಕ್ರಮಗಳ ಬಗ್ಗೆ ಯೋಚಿಸುವುದಾಗಿ ಅವರು ಹೇಳಿದರು. ಈ ಸ್ಟಿಂಗ್ ಆಪರೇಷನ್ ಹಿಂದೆ ಯಾರು ಇದ್ದಾರೆ, ನಮ್ಮ ಪಕ್ಷದವರೇ ಮಾಡಿದ್ದಾರೆಯೇ ಅಥವಾ ಬೇರೆಯವರ ಕೈವಾಡವಿದೆಯೇ ಎಂಬುದು ತನಿಖೆಯಿಂದ ಹೊರಬರಬೇಕು ಎಂದು ಅವರು ಹೇಳಿದರು.
ನಮ್ಮ ಪಕ್ಷದವರೇ ಶಾಮೀಲು: ಯತೀಂದ್ರ ಆರೋಪ ಈ ಸ್ಟಿಂಗ್ ವಿಡಿಯೋದಲ್ಲಿ ತಮ್ಮ ಪಕ್ಷದವರೇ ಭಾಗಿಯಾಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಒಬ್ಬ ಮಾಧ್ಯಮ ಮುಖ್ಯಸ್ಥರೂ ಸಹ ಇದರಲ್ಲಿ ಕಾಣಿಸಿಕೊಂಡಿದ್ದಾರೆ ಎಂಬುದನ್ನು ವಿಡಿಯೋ ಸ್ಪಷ್ಟಪಡಿಸುತ್ತದೆ. ಆದರೆ, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಪಕ್ಷವನ್ನು ದೂಷಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಪುತ್ತೂರು ಟಿಕೆಟ್ ಪಡೆಯುವುದಕ್ಕಾಗಿ ಸ್ಟಿಂಗ್: ಯತೀಂದ್ರ
ಸ್ಟಿಂಗ್ ಆಪರೇಷನ್ನ ಹಿಂದಿನ ಉದ್ದೇಶದ ಬಗ್ಗೆ ಮಾತನಾಡಿದ ಯತೀಂದ್ರ, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆಯೊಬ್ಬರು ಪುತ್ತೂರು ಟಿಕೆಟ್ಗಾಗಿ ಆಕಾಂಕ್ಷಿಯಾಗಿದ್ದರು ಎಂಬ ಮಾಹಿತಿ ಇದೆ. ಹಾಗಾಗಿ, ರಾಜಕೀಯ ಲಾಭಕ್ಕಾಗಿ ಮತ್ತು ಸಿದ್ದರಾಮಯ್ಯ ಹೆಸರನ್ನು ಕೆಡಿಸಲು ಈ ರೀತಿಯ ಕೃತ್ಯಕ್ಕೆ ಮುಂದಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಸಿದ್ದರಾಮಯ್ಯ ಘನತೆಯನ್ನು ಹಾಳುಮಾಡಲು, ಅವರ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ ಇಡಲು ಮತ್ತು ಬ್ಲಾಕ್ಮೇಲ್ ಮಾಡಲು ಈ ಯತ್ನ ನಡೆದಿದೆ ಎಂದು ಯತೀಂದ್ರ ಆರೋಪಿಸಿದರು.


























