ಮಂಗಳೂರು: ಕೊಲೆಯಂತಹ ಗಂಭೀರ ಆರೋಪ ಹೊರಿಸಿ ಹಣ ಮತ್ತು ಆಸ್ತಿಯನ್ನು ಸುಲಿಗೆ ಮಾಡಲು ಸಂಚು ರೂಪಿಸಿ, ಕುಟುಂಬದ ಗೌರವಕ್ಕೆ ಧಕ್ಕೆ ತಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಓರ್ವನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು ಗಾನಮಜಲ್ ನಿವಾಸಿ ನವೀನ್ ಥೋರೆಸ್ (42) ಎಂದು ಗುರುತಿಸಲಾಗಿದೆ.
ಮಾಯ ಅನ್ನಾಮೇರಿ ರೇಗೋ ಅವರು ನೀಡಿದ ದೂರಿನ ಮೇರೆಗೆ ಆ.10ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಮುಂದುವರಿಸಿದ ಪೊಲೀಸರು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅ.23ರಂದು ನವೀನ್ ಥೋರೆಸ್ನನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಅ.24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಕುರಿತು ತನಿಖೆ ಮುಂದುವರಿದಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

























