ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಮೂವರು ಬಾಲಕರು ಸೇರಿದಂತೆ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳವು ಮಾಡಲಾಗಿದ್ದ ಆರು ದ್ವಿಚಕ್ರ ವಾಹನಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮೂರು ವಾಹನಗಳು ಸೇರಿದಂತೆ ಒಟ್ಟು ಒಂಬತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಮೌಲ್ಯ ₹4.50 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದ್ವಿಚಕ್ರ ವಾಹನ ಕಳವು ಪ್ರಕರಣಗಳು ದಾಖಲಾಗಿದ್ದವು.
ಮಂಗಳೂರು ದಕ್ಷಿಣ ಠಾಣಾ ವ್ಯಾಪ್ತಿಯ ವೆಲೆನ್ಸಿಯಾ ಜಂಕ್ಷನ್ನ ಡಾನ್ ಬಾಸ್ಕೋ ಹಾಸ್ಟೆಲ್ ಬಳಿ ಅ.12ರಂದು ನಿಲ್ಲಿಸಿದ್ದ ಕೆಟಿಎಂ ಡ್ಯೂಕ್ ಬೈಕ್, ಜಪ್ಪು ಮಾರ್ಕೆಟ್ ಬಳಿ ಅ.19ರಂದು ನಿಲ್ಲಿಸಿದ್ದ ಯಮಹಾ ಎಫ್ಝಡ್ ಬೈಕ್, ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ದುರ್ಗಾ ಹೋಟೆಲ್ ಮುಂದೆ ಅ.21ರಂದು ನಿಲ್ಲಿಸಿದ್ದ ಬಜಾಜ್ ಡಿಸ್ಕವರಿ ಬೈಕ್ ಹಾಗೂ ಹೊಯ್ಗೆ ಬಜಾರ್ನ ಭಗವತಿ ಅಪಾರ್ಟ್ಮೆಂಟ್ ಕೆಳಗೆ ಅ.22ರಂದು ನಿಲ್ಲಿಸಿದ್ದ ಕೆಟಿಎಂ ಡ್ಯೂಕ್ ಬೈಕ್ ಕಳವಾಗಿದ್ದವು.
ಅದೇ ರೀತಿ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಬಳಿ ಅ.18ರಂದು ನಿಲ್ಲಿಸಿದ್ದ ರಾಯಲ್ ಎನ್ಫೀಲ್ಡ್ ಬುಲೆಟ್ ಹಾಗೂ ಕುತ್ತಾರ್ ಪಂಡಿತ್ ಹೌಸ್ ಬಳಿ ಅ.21ರಂದು ನಿಲ್ಲಿಸಿದ್ದ ಯಮಹಾ ಎಫ್ಝಡ್ ಬೈಕ್ ಕಳವಾಗಿದ್ದವು.
ಪ್ರಕರಣಗಳ ತನಿಖೆಗಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಅಪರಾಧ ಪತ್ತೆ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ತಂಡವು ತನಿಖೆ ನಡೆಸಿ ಮಾಹಿತಿ ಸಂಗ್ರಹಿಸುವ ಮೂಲಕ ಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದೆ. ಇವರಲ್ಲಿ ನಾಲ್ವರನ್ನು ಬಂಧಿಸಲಾಗಿದ್ದು, ಉಳಿದ ಮೂವರು ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದಾರೆ.
ಐಷಾರಾಮಿ ಜೀವನಕ್ಕಾಗಿ ಕಳವು : ಆರೋಪಿಗಳು ಇತರ ಅಪರಾಧ ಕೃತ್ಯಗಳು ಹಾಗೂ ಸರಗಳ್ಳತನದಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡು, ಅದರ ಲಾಭದಿಂದ ಐಷಾರಾಮಿ ಜೀವನ ನಡೆಸುವ ಉದ್ದೇಶ ಹೊಂದಿದ್ದರು ಎನ್ನುವುದು ವಿಚಾರಣೆಯಿಂದ ತಿಳಿದುಬಂದಿದೆ. ಬೆಲೆಬಾಳುವ ಮೋಟಾರ್ ಸೈಕಲ್ಗಳನ್ನು ಗುರಿಯಾಗಿಸಿಕೊಂಡು, ನಿಲುಗಡೆ ಮಾಡಿದ್ದ ಸ್ಥಳಗಳಿಂದ ಕಳವು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ನಾಲ್ವರು ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪತ್ತೆ ಕಾರ್ಯದಲ್ಲಿ ಭಾಗವಹಿಸಿದವರು : ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು ಅವರ ನೇತೃತ್ವದಲ್ಲಿ ಪಿಎಸ್ಐ ಮಾರುತಿ ಹಾಗೂ ಅಪರಾಧ ಪತ್ತೆ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಪುಟ್ಟರಾಮ್, ಸಾಗರ ದೇವಕತ್ತಿ ಮತ್ತು ಆಂಜನೇಯ ಕೆ.ಎಸ್. ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಠಾಣೆಯ ಇತರ ಅಧಿಕಾರಿ ಮತ್ತು ಸಿಬ್ಬಂದಿ ಸಹಕರಿಸಿದ್ದರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























