ಪುತ್ತೂರು: ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿಯ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿಯುತ್ತಿದ್ದ ಕಾರ್ಯಕರ್ತ ಹರಿಪ್ರಸಾದ್ ಯಾದವ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಹಲವು ವರ್ಷಗಳಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಹರಿಪ್ರಸಾದ್ ಯಾದವ್ ಅವರು ಇತ್ತೀಚೆಗೆ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಅವರ ಕೆಲವು ನಡೆಯಿಂದ ಅಸಮಾಧಾನಗೊಂಡಿದ್ದಾರೆ. ಈ ಕಾರಣಗಳಿಂದ ಅವರು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನೀಡಲು ಸಿದ್ಧತೆ ನಡೆಸಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳಿಂದ ತಿಳಿದು ಬಂದಿದೆ.
ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹೊರ ಬಿದ್ದಿಲ್ಲ. ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಲಿರುವ ಹರಿಪ್ರಸಾದ್ ಅವರು ಪಕ್ಷದ ಕಾರ್ಯಕರ್ತರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷದೊಳಗಿನ ಈ ವಿಚಾರವನ್ನು ಮಂಡಲ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಯಾವ ರೀತಿ ಪರಿಸ್ಥಿತಿ ನಿಭಾಯಿಸುತ್ತಾರೆ ಎಂಬ ಕುತೂಹಲ ಪಕ್ಷದ ಕಾರ್ಯಕರ್ತರಲ್ಲಿ ಮೂಡಿದೆ. ಈ ಘಟನೆಯ ಕುರಿತು ಮಾಹಿತಿ ಪಡೆಯಲು ಹರಿಪ್ರಸಾದ್ ಯಾದವ್ ಅವರನ್ನು ಸಂಪರ್ಕಿಸಲಾಯಿತಾದರೂ ಅವರು ಸಂಪರ್ಕಕ್ಕೆ ಲಭ್ಯರಾಗಿಲ್ಲ.


























