ಮಂಗಳೂರು: ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳ ಗೆಲುವು ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಮತದಾರರು ನೀಡಿದ ತಕ್ಕ ಉತ್ತರವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಚುನಾವಣಾ ಫಲಿತಾಂಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಶಿಕ್ಷಕರು ಹಾಗೂ ಪದವೀಧರ ಮತದಾರರು ಎನ್ಡಿಎ ಅಭ್ಯರ್ಥಿಗಳನ್ನು ಅಭೂತಪೂರ್ವವಾಗಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಇವಿಎಂ ಕುರಿತು ನಿರಂತರವಾಗಿ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರಿಗೆ ಈ ಫಲಿತಾಂಶ ಕಣ್ಣು ತೆರೆಸಬೇಕಿದೆ. ಈ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆದಿದ್ದು, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿರುವುದು ಆಡಳಿತಾರೂಢ ಸರ್ಕಾರದ ದುರಾಡಳಿತದ ಬಗ್ಗೆ ಜನರು ಎಷ್ಟೊಂದು ಬೇಸತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ. ನಾಟಕೀಯ ರಾಜಕೀಯದ ಮೂಲಕ ಕಾಂಗ್ರೆಸ್ ತನ್ನ ಪತನವನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಅವರು ಟೀಕಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ‘ವಿಕಸಿತ ಭಾರತ-2047’ರ ಕನಸಿನಲ್ಲಿ ನಂಬಿಕೆಯಿಟ್ಟಿರುವ ರಾಜ್ಯದ ಪ್ರಬುದ್ಧ ಮತದಾರರು, ವಿಧಾನ ಪರಿಷತ್ತಿಗೆ ಅರ್ಹ ಎನ್ಡಿಎ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ಚೌಟ ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಗ್ಯಾರಂಟಿಗಳ ನೆಪದಲ್ಲಿ ರಾಜ್ಯದ ಖಜಾನೆ ಖಾಲಿಯಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸಲು ಸರ್ಕಾರದ ಬಳಿ ಹಣವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ನ ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ಕರ್ನಾಟಕದ ಆರ್ಥಿಕ ಸ್ಥಿತಿಗೆ ಹಾನಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯವನ್ನು ಮತ್ತೆ ಅಭಿವೃದ್ಧಿಯ ಹಾದಿಗೆ ತರಲು ಜನವಿರೋಧಿ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಬೇಕು. ಮುಂದಿನ ಚುನಾವಣೆಗಳಲ್ಲಿ ಪ್ರಜ್ಞಾವಂತ ಮತದಾರರು ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ.


























