ಬಂಟ್ವಾಳ: ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು 88 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
2020ರ ಅಕ್ಟೋಬರ್ 28ರಂದು ಸಂಜೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕ ದಿನೇಶ್ ಅವರು ಸ್ಟುಡಿಯೋದಲ್ಲಿದ್ದಾಗ, ಪೂರ್ವದ್ವೇಷದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ಅಲ್ಲಿಗೆ ಬಂದು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ್ದರು ಎನ್ನಲಾಗಿದೆ.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಪ್ರಕರಣದ ತನಿಖೆ ನಡೆಸಿ, ಆರೋಪಿಗಳಾದ ಮಹಮ್ಮದ್ ಸೈಫುದಿನ್, ಮಹಮ್ಮದ್ ಅರ್ಷಾದ್, ಅಬ್ದುಲ್ ರಹಿಮಾನ್ (ಮುನ್ನಿ) ಹಾಗೂ ಮಹಮ್ಮದ್ ಸವಾದ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು 2026ರ ಅಕ್ಟೋಬರ್ 28ರಂದು ನಾಲ್ವರು ಆರೋಪಿಗಳಿಗೂ ತಲಾ 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು 88 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಜ್ಯೋತಿ ನಾಯಕ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.


























