ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರಿನಲ್ಲಿ ಕಾರ್ಯನಿರ್ವಹಣೆ) ತೀರ್ಪು ನೀಡಿದೆ.
ನೆಲ್ಯಾಡಿ ನಿವಾಸಿ ರವಿ ಅಲಿಯಾಸ್ ರವೀಂದ್ರ ಆಚಾರ್ಯ (32) ಶಿಕ್ಷೆಗೊಳಗಾದ ಆರೋಪಿ. ಈತನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ಅ.ಕ್ರ. 208/2018ರ ಅಡಿಯಲ್ಲಿ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಡಿ. ಮಂಜುನಾಥ್ ಅವರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುಮಂಗಲ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹25,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಒಂದು ವರ್ಷ ಹೆಚ್ಚುವರಿ ಕಠಿಣ ಜೈಲು ಶಿಕ್ಷೆ ವಿಧಿಸಲು ಆದೇಶಿಸಿದ್ದಾರೆ.
ಇದಲ್ಲದೆ, ಐಪಿಸಿ ಸೆಕ್ಷನ್ 506ರ ಅಡಿಯಲ್ಲಿ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಮತ್ತೊಂದು ವರ್ಷ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗಲಿವೆ.
ಸರ್ಕಾರದ ಪರ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅಡಂತ್ಯಾಯ ಅವರು ಸಮರ್ಥ ವಾದ ಮಂಡಿಸಿದ್ದರು.


























