ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಕಡಬ ನೂಜಿಬಾಳ್ತಿಲದ ಸದ್ದಾಂ (34) ಎಂಬಾತನಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರು ಕಾರ್ಯವ್ಯಾಪ್ತಿ) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಬಾಲಕಿಯ ಮನೆಗೆ ತೆರಳಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಡಬ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕೆ. ಅವರು ಪ್ರಕರಣದ ತನಿಖೆ ನಡೆಸಿ, ಆರೋಪಿ ಸದ್ದಾಂ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸುಮಂಗಲ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಪೋಕ್ಸೋ ಕಾಯ್ದೆಯ ಸೆಕ್ಷನ್ 5(ಎಲ್) ಮತ್ತು 5(ಜೆ)(ii) ಸಹಿತ ಸೆಕ್ಷನ್ 6ರ ಅಡಿಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ವರ್ಷ ಹೆಚ್ಚುವರಿ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ.
ಇದಲ್ಲದೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506ರ ಅಡಿಯಲ್ಲಿ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಮತ್ತೊಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದ್ದು, ಎರಡೂ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗಲಿವೆ.
ಆರೋಪಿ ಸದ್ದಾಂ ಕಡಬ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಆತನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ನಾಲ್ಕು ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅಡಂತಾಯ ಅವರು ಸರ್ಕಾರದ ಪರವಾಗಿ ಸಮರ್ಥ ವಾದ ಮಂಡಿಸಿದ್ದರು.


























