ಕಡಬ: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬರು ಐದು ವರ್ಷಗಳ ಬಳಿಕ ನ್ಯಾಯಾಲಯಕ್ಕೆ ಹಾಜರಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಹಾರಾಷ್ಟ್ರ ನಿವಾಸಿ ವಿಶಾಲ್ ಪೊಂಕೆ (30) ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದರು. ಇವರ ಪತ್ತೆಗಾಗಿ ಪೊಲೀಸರು ಪ್ರಯತ್ನ ನಡೆಸಿದ್ದು, ನ್ಯಾಯಾಲಯವು ಆರೋಪಿಯ ವಿರುದ್ಧ ಪ್ರೊಕ್ಲಮೇಶನ್ ಹೊರಡಿಸಿತ್ತು.
ಕಡಬ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ನರಸಿಂಹ @ ರಾಜು, ವಿಜಯ್ ಸುರೇಶ್ ಪೊಂಕೆ, ನವೀನ್ ಚಂದ್ರ ಸಿಂಗ್, ಚಂದ್ರಕಾಂತ್ ಪೂಜಾರಿ ಹಾಗೂ ಪ್ರಕಾಶ್ ಬಹದ್ದೂರ್ ಅವರಿಗೆ ಈಗಾಗಲೇ ಪುತ್ತೂರಿನ ACJ ಮತ್ತು JMFC ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು.
ಈ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿಶಾಲ್ ಪೊಂಕೆ ಅವರು ಅ.30ರಂದು ಪುತ್ತೂರಿನ 2ನೇ ACJ ಮತ್ತು JMFC ನ್ಯಾಯಾಲಯ (ಸಂಚಾರಿ ನ್ಯಾಯಾಲಯ, ಕಡಬ)ಕ್ಕೆ ಹಾಜರಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ವಿಶಾಲ್ ಪೊಂಕೆ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ MOB ತೆರೆಯಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಯೂ 2016ರಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ವಿಚಾರಣೆಯಲ್ಲಿದೆ.


























