ಪುತ್ತೂರು: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಮಂಗಲ ಗ್ರಾಮದ ವಸಂತಿ (26) ಎಂಬವರು ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ ಬಳಿಕ ನಾಪತ್ತೆಯಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಸಂತಿ ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಕೆಎಫ್ಡಿಸಿ (KFDC) ಮೀನು ಸಂಸ್ಕರಣಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಂಪನಿಯ ವಸತಿಗೃಹದಲ್ಲಿ ವಾಸವಾಗಿದ್ದರು. ತಿಂಗಳಿಗೊಮ್ಮೆ ಮನೆಗೆ ಬಂದು ಹೋಗುತ್ತಿದ್ದ ಅವರು, ಅ.10ರಂದು ಮನೆಗೆ ಬಂದಿದ್ದರು. ಬಳಿಕ ಅ.13ರಂದು ಬೆಳಿಗ್ಗೆ ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದರು.
ಅ.27ರಂದು ಮನೆಯವರು ವಸಂತಿಗೆ ಕರೆ ಮಾಡಿದಾಗ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ, ಅವರು ಕೆಲಸ ಮಾಡುತ್ತಿದ್ದ ಕಂಪನಿಗೆ ತೆರಳಿ ವಿಚಾರಿಸಿದ್ದಾರೆ. ಈ ವೇಳೆ ಅ.10ರಂದು ರಜೆಗಾಗಿ ಮನೆಗೆ ತೆರಳಿದ್ದ ವಸಂತಿ, ಬಳಿಕ ಕೆಲಸಕ್ಕೆ ಹಾಜರಾಗಿಲ್ಲ ಎಂದು ಕಂಪನಿಯ ಮೇಲ್ವಿಚಾರಕರು ತಿಳಿಸಿದ್ದಾರೆ.
ಇದರಿಂದ ಆತಂಕಗೊಂಡ ಮನೆಯವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ವಸಂತಿ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
ವಸಂತಿ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


























