ಬಂಟ್ವಾಳ: ಕೆಲಿಂಜ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನ.2ರಂದು ರಾತ್ರಿ ನಿಧನರಾದರು.
ಗುರುಪುರ ಕೈಕಂಬದ ಕಂದಾವರ ಬೈಲು ನಿವಾಸಿಯಾಗಿದ್ದ ವನಿತಾ ಶೆಟ್ಟಿಗಾರ್ ಅವರು ನ.2ರಂದು ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ತಿಂಡಿ ಸೇವಿಸುತ್ತಿದ್ದ ವೇಳೆ ಕೆಮ್ಮು ಕಾಣಿಸಿಕೊಂಡು, ಬಳಿಕ ವಾಂತಿಯಾಗಿತ್ತು. ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
34 ವರ್ಷಗಳ ಸುದೀರ್ಘ ಸೇವಾವಧಿಯಲ್ಲಿ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದ ವನಿತಾ ಶೆಟ್ಟಿಗಾರ್ ಅವರ ನಿಧನ ಶಿಕ್ಷಣ ವಲಯದಲ್ಲಿ ತೀವ್ರ ದುಃಖ ಮೂಡಿಸಿದೆ. ಸಹೋದ್ಯೋಗಿ ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.


























