ಮಂಗಳೂರು: ಗಾಂಜಾ ಮಾರಾಟ ಮಾಡಲು ತಂದಿದ್ದ ಪುತ್ತೂರು ಮೂಲದ ಯುವಕನನ್ನು ಪಣಂಬೂರು ಪೊಲೀಸರು ಬಂಧಿಸಿ, ಆತನ ವಶದಲ್ಲಿದ್ದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾ ಸಹಿತ ಕಾರು ಮತ್ತು ಮೊಬೈಲ್ ಫೋನ್ ವಶಪಡಿಸಿಕೊಂಡ ಘಟನೆ ನ.5ರಂದು ನಡೆದಿದೆ.
ಬಂಧಿತನನ್ನು ಪುತ್ತೂರು ತಾಲೂಕಿನ ಪಡ್ನೂರು ಅಂಚೆಯ ಪಡ್ಡಾಯೂರು ಹೌಸ್ ನಿವಾಸಿ ಹಂಜಾ ಅವರ ಪುತ್ರ ಮೊಹಮ್ಮದ್ ನಿಸಾರ್ (23) ಎಂದು ಗುರುತಿಸಲಾಗಿದೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡಲು ತಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಉಪವಿಭಾಗದ ಎಸಿಪಿ ತಂಡದ ಅಧಿಕಾರಿಗಳು ಮತ್ತು ಪಣಂಬೂರು ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆತನಿಂದ ಅಂದಾಜು 1.90 ಲಕ್ಷ ರೂ. ಮೌಲ್ಯದ 3.8 ಕೆ.ಜಿ. ಗಾಂಜಾ, 4 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 3.94 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಆರೋಪಿಯು ಸುರತ್ಕಲ್, ಪಣಂಬೂರು, ಕಾವೂರು ಸೇರಿದಂತೆ ಮಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿಂದೆ ಕೂಡ ಹಲವು ಬಾರಿ ಮಂಗಳೂರು ನಗರದಲ್ಲಿ ಗಾಂಜಾ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 137/2026ರಂತೆ ಎನ್ಡಿಪಿಎಸ್ ಕಾಯ್ದೆಯ ಕಲಂ 8(C), 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

























