ವಿಟ್ಲ: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಬೈರಿಕಟ್ಟೆ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ದುರಸ್ತಿಗೀಡಾಗಿ ನಿಂತಿದ್ದ ಘನ ಲಾರಿಯಲ್ಲಿ ಯಾವುದೇ ಪರವಾನಿಗೆ ಹಾಗೂ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಸಾರ್ವಜನಿಕ ರಸ್ತೆಯಲ್ಲಿ ಲಾರಿ ನಿಂತಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಈ ವೇಳೆ KA-21-C-4608 ನೋಂದಣಿ ಸಂಖ್ಯೆಯ ಘನಲಾರಿ ರಸ್ತೆಯಲ್ಲಿ ನಿಂತಿರುವುದು ಕಂಡುಬಂದಿದೆ. ಲಾರಿ ಚಾಲಕ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಇರ್ಫಾನ್ ಪಾಷಾ (40) ಅವರನ್ನು ವಿಚಾರಿಸಿದಾಗ, ಲಾರಿ ದುರಸ್ತಿಗೀಡಾಗಿರುವುದಾಗಿ ತಿಳಿಸಿದ್ದಾರೆ. ಬಳಿಕ ಲಾರಿಯಲ್ಲಿದ್ದ ಲೋಡ್ ಪರಿಶೀಲಿಸಿದಾಗ ಯಾವುದೇ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 229/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. BNS ಹಾಗೂ ಗಣಿ ಮತ್ತು ಖನಿಜಗಳ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.


























