ವಿಟ್ಲ: ದೀಪಾವಳಿ ಹಬ್ಬದ ಪ್ರಯುಕ್ತ ಕಾರ್ಯಕರ್ತರು ವಿಟ್ಲ ನಗರದಲ್ಲಿ ಸ್ಥಾಪಿಸಿದ್ದ ಪಟಾಕಿ ಅಂಗಡಿಯ ಹಿಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆಗೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅಂಗಡಿ ಮಾಲಕರು ಹಾಗೂ ಕಾರ್ಯಕರ್ತರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡ ಅವರು, ಬಳಿಕ ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಸಬ್ಇನ್ಸ್ಪೆಕ್ಟರ್ ರಾಮಕೃಷ್ಣ ಹಾಗೂ ಡಿವೈಎಸ್ಪಿ ಯಶ್ ಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವ ಮೂಲಕ ಬೈಕ್ಗೆ ಬೆಂಕಿ ಹಚ್ಚಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.
ಆರೋಪಿಗಳನ್ನು ಶೀಘ್ರ ಬಂಧಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ವಿಟ್ಲದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.
























