ಬೆಂಗಳೂರು: ಮದುವೆಗೆ ಇನ್ನು ನಾಲ್ಕೈದು ದಿನ ಬಾಕಿ ಇರುವಾಗಲೇ ವಧು ಸೇರಿದಂತೆ ಇಬ್ಬರು ಯುವತಿಯರು ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ನ.11ರಂದು ಸಂಭವಿಸಿದೆ.**
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಐತನಹಳ್ಳಿ ಗ್ರಾಮದ ಸಿಂಧುಶ್ರೀ ಹಾಗೂ ಅವರ ಅತ್ತೆ ಮಗಳು ವಿದ್ಯಾ ಮೃತಪಟ್ಟವರು.
ಸಿಂಧುಶ್ರೀ ಅವರ ವಿವಾಹ ನವೆಂಬರ್ 16ರಂದು ನಿಗದಿಯಾಗಿದ್ದು, ಹಿಂದಿನ ದಿನ ಆರತಕ್ಷತೆ ಕಾರ್ಯಕ್ರಮವೂ ಆಯೋಜನೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧುಗಳಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಲು ಸಿಂಧುಶ್ರೀ ಅವರು ಕಾಲೇಜು ವಿದ್ಯಾರ್ಥಿನಿಯಾಗಿದ್ದ ವಿದ್ಯಾ ಜೊತೆ ಸ್ಕೂಟಿಯಲ್ಲಿ ತೆರಳುತ್ತಿದ್ದರು.
ಮಧ್ಯಾಹ್ನ ಸುಮಾರು 3.30ರ ವೇಳೆಗೆ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದಿದ್ದು, ಲಾರಿಯ ಚಕ್ರ ತಲೆಯ ಮೇಲೆ ಹರಿದ ಪರಿಣಾಮ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಧಾವಿಸಿದ ಬ್ಯಾಟರಾಯನಪುರ ಸಂಚಾರ ಠಾಣೆ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮದುವೆಯ ಸಂಭ್ರಮದಲ್ಲಿದ್ದ ಸಿಂಧುಶ್ರೀ ಕುಟುಂಬದಲ್ಲಿ ಈ ದುರಂತ ಆಘಾತ ಮೂಡಿಸಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

























