ಸುಬ್ರಹ್ಮಣ್ಯ: 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
2000ರ ಸೆ.10ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುತ್ತಿಗಾರು ಎಂಬಲ್ಲಿ ಕೆಲಸದ ವಿಚಾರವಾಗಿ ಕೇರಳ ಮೂಲದ ಜೊಯ್, ಶೆಲ್ಟನ್ ಮತ್ತು ಟೋಮಿ ಅಲಿಯಾಸ್ ಥಾಮಸ್ ಎಂಬವರ ನಡುವೆ ಜಗಳ ನಡೆದಿತ್ತು. ಈ ವೇಳೆ ಜೊಯ್ ಎಂಬಾತನಿಗೆ ಟೋಮಿ ಚೂರಿಯಿಂದ ಇರಿದು ಕೊಲೆ ಮಾಡಿದ್ದ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 37/2000ರಂತೆ ಐಪಿಸಿ ಕಲಂ 302 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾಗಿದ್ದ ಕೇರಳದ ತ್ರಿಶೂರ್ ನಿವಾಸಿ ಟೋಮಿ ಅಲಿಯಾಸ್ ಥಾಮಸ್ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ನ.12ರಂದು ಸುಬ್ರಹ್ಮಣ್ಯ ಠಾಣೆಯ ಎಎಸ್ಐ ಸ್ಕರೀಯಾ, ಸುಳ್ಯ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಹರೀಶ್ ಹಾಗೂ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಆದ್ರಾಂ ಅವರ ತಂಡ ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.


























