ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ನಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳು ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪಣಂಬೂರು ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ನೆಲೆಸಿರುವುದು ಬೆಳಕಿಗೆ ಬಂದಿದೆ.
ಇಬ್ಬರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಿ, ಬಳಿಕ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ನಿಟ್ಟಿನಲ್ಲಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ.
ಪಣಂಬೂರು ಪೊಲೀಸ್ ನಿರೀಕ್ಷಕ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ್ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್, ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.


























