ಉಪ್ಪಿನಂಗಡಿ: ಸುಲಿಗೆ ಪ್ರಕರಣವೊಂದರಲ್ಲಿ ಕಳೆದ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಚಿಕ್ಕಮಗಳೂರು ಜಿಲ್ಲೆಯ ಮಾಗುಂಡಿ ನಿವಾಸಿ ಮಸೂದ್ ಅಲಿಯಾಸ್ ಮಸೂರ ಎಂದು ಗುರುತಿಸಲಾಗಿದೆ.
2016ರ ಜುಲೈ 26ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿಯಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಶಿವಶಂಕರ್ ಶಾಸ್ತ್ರಿ ಅವರ ಮನೆಗೆ ನಾಲ್ವರು ಅಪರಿಚಿತರು ಚಿಕಿತ್ಸೆ ಪಡೆಯುವ ನೆಪದಲ್ಲಿ ಬಂದಿದ್ದರು. ಬಳಿಕ ಶಿವಶಂಕರ್ ಶಾಸ್ತ್ರಿ ಹಾಗೂ ಅವರ ಪತ್ನಿಯನ್ನು ಕಟ್ಟಿಹಾಕಿ, ಚಿನ್ನಾಭರಣ ಮತ್ತು ನಗದು ಸೇರಿದಂತೆ ಒಟ್ಟು ₹2,35,800 ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾಗಿದ್ದ ಮಸೂದ್ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದೀಗ ಉಪ್ಪಿನಂಗಡಿ ಠಾಣೆಯ ಹೆಡ್ಕಾನ್ಸ್ಟೇಬಲ್ ನಂಜುಂಡಯ್ಯ ಮತ್ತು ಪೊಲೀಸ್ ಕಾನ್ಸ್ಟೇಬಲ್ ಮ್ಯಾಥ್ಯು ವರ್ಗಿಸ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


























