ಸುಳ್ಯ: ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸ ಮಾಡಿ ಮಾರಾಟ ಮಾಡಲು ಸಾಗಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರನ್ನು ಸುಳ್ಯ ಪೊಲೀಸರು ಬಂಧಿಸಿ, ಎರಡು ಜಾನುವಾರುಗಳನ್ನು ರಕ್ಷಿಸಿರುವ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಬಂಧಿತರನ್ನು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್.ಎ (28) ಮತ್ತು ಸಂಶುದ್ದೀನ್.ಎಸ್.ಎಂ. (25) ಎಂದು ಗುರುತಿಸಲಾಗಿದೆ.
ಗಾಂಧಿನಗರ ಶಾಲಾ ಮೈದಾನದ ಬಳಿ ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ ಇಬ್ಬರು ವ್ಯಕ್ತಿಗಳು ಮೈದಾನದಲ್ಲಿದ್ದ ಕಂಬಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿರುವುದಾಗಿ ತಿಳಿದುಬಂದಿದೆ ಎನ್ನಲಾಗಿದೆ.
ಆರೋಪಿಗಳು ಕೃತ್ಯಕ್ಕೆ ಬಳಸಲು ಬಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 161/2026ರಂತೆ ಬಿಎನ್ಎಸ್ 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಜೊತೆಗೆ 15ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























