ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಡ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

























