ಮಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗುರುವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಸ್ಥಳೀಯ ಮಟ್ಟದಲ್ಲಿ ಸಮನ್ವಯದ ಕೊರತೆಯಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಅಲ್ಲದೆ, ‘ನಾನು ಪಕ್ಕಾ ಹಿಂದೂವಾದಿ’ ಎಂದು ನಂಬಿಸಿದ್ದರಿಂದ ಮತದಾರರು ಆ ರೀತಿಯ ತೀರ್ಮಾನ ಕೈಗೊಂಡಿದ್ದರು. ಆದರೆ ಈ ಬಾರಿ ಮತದಾರರು ಮರುಳಾಗುವುದಿಲ್ಲ. ಬಿಜೆಪಿಯ ಪರವಾಗಿ ಫಲಿತಾಂಶ ಬರಲಿದೆ ಎಂದು ಹೇಳಿದರು.
ಈಗಾಗಲೇ ಬಿಜೆಪಿ ಜಿಲ್ಲಾಧ್ಯಕ್ಷರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಮುಖಂಡರು ಈ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ಗೆಲುವಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

























