ಮಂಗಳೂರು: ಕೆಲಸ ಮಾಡಿದ ಹಣ ನೀಡಿಲ್ಲ ಎಂಬ ವಿಚಾರಕ್ಕೆ ಮನೆಗೆ ತೆರಳಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆಗೈದ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
2020ರ ನವೆಂಬರ್ 3ರಂದು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ ಈ ಘಟನೆ ನಡೆದಿತ್ತು.
ಸುರೇಂದ್ರನ್ ಅವರು ಕೆಲಸದ ಹಣ ನೀಡಿಲ್ಲ ಎಂಬ ಕಾರಣಕ್ಕೆ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಮನೆಗೆ ತೆರಳಿದ್ದ. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದ. ಈ ವಿಚಾರವಾಗಿ ಮಾತಿಗೆ ಮಾತು ಬೆಳೆದು, ಪೇಪರ್ ಕಟರ್ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದ. ಅಲ್ಲದೆ, ವ್ಯಾಯಾಮದ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಕೊಲೆ, ದರೋಡೆ ಹಾಗೂ ಸಾಕ್ಷ್ಯ ನಾಶ ಸೇರಿದಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಪ್ರಕರಣದ ತನಿಖೆ ನಡೆಸಿ ಸಂತು ಅಲಿಯಾಸ್ ಸಂತೋಷ್ ಮತ್ತು ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು, ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿದ್ದು, ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302ರಡಿ ಜೀವಾವಧಿ ಶಿಕ್ಷೆ ಹಾಗೂ ₹25,000 ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಕಲಂ 392ರಡಿ ಎರಡು ವರ್ಷಗಳ ಕಾರಾವಾಸ ಹಾಗೂ ₹5,000 ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಕಲಂ 201ರಡಿ ಆರು ತಿಂಗಳ ಕಾರಾವಾಸ ಹಾಗೂ ₹2,000 ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು ₹32,000 ದಂಡದ ಮೊತ್ತದಲ್ಲಿ ₹7,000 ಸರಕಾರಕ್ಕೆ ಹಾಗೂ ₹25,000 ಅನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ವಾದ ಮಂಡಿಸಿದ್ದರು.

























