ಬಂಟ್ವಾಳ: ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ಹಾಗೂ 54 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಐಪಿಸಿ ಕಲಂ 376, 448, 323, 504 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿ, ಪ್ರಕರಣದ ತನಿಖಾಧಿಕಾರಿಗಳು ಹಾಗೂ ಅಂದಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 54,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

























