ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಯಾವುದೇ ಪೂರ್ವಾನುಮತಿ ಪಡೆಯದೆ ಗುಂಪುಗೂಡಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಟೋಲ್ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ ಆರೋಪದ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಕೆಲವು ಮಂದಿ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿದ್ದರು. ಈ ವೇಳೆ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಟೋಲ್ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಬಿಎನ್ಎಸ್ 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


























