ಕಡಬ: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.27ರಂದು ಬೆಳಿಗ್ಗೆ ಬಿಳಿನೆಲೆ ಗ್ರಾಮದ ಕೋಟೆ ಹೊಳೆ ಸೇತುವೆ ಬಳಿ ನಡೆದಿದೆ.
ಸೋಮವಾರಪೇಟೆ ನಿವಾಸಿ ವಿಶ್ವಾಸ್ (31) ಮೃತಪಟ್ಟವರು.
ವಿಶ್ವಾಸ್ ಅವರು KA-01-HX-1968 ನೋಂದಣಿಯ ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದ ವೇಳೆ, ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ಬರುತ್ತಿದ್ದ KA-12-MA-8653 ನೋಂದಣಿಯ ಕಾರು ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ. ಕಾರನ್ನು ನಂದನ್ ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಹಿತ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಸ್ಥಳದಲ್ಲಿದ್ದವರು ಗಾಯಾಳುವನ್ನು ಉಪಚರಿಸಿ ಚಿಕಿತ್ಸೆಗಾಗಿ ಕಡಬಕ್ಕೆ ಕಳುಹಿಸಿಕೊಟ್ಟಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 146/2026, ಕಲಂ 281, 106 BNS-2023ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


























