ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಗೂಂಡಾ ಕಾಯ್ದೆಯನ್ನು ಹಿಂಪಡೆದಿದೆ ಎಂಬ ಸುಳ್ಳು ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಈ ಮಾಹಿತಿ ಸತ್ಯಕ್ಕೆ ದೂರವಾಗಿದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಪ್ರಕರಣದ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ (Goonda Act) ಅಳವಡಿಸಲು ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದು, ಈಗಾಗಲೇ ಮಾನ್ಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಆರೋಪಿಗಳು ಕಳೆದ ಒಂದೂವರೆ ವರ್ಷದಿಂದ ನ್ಯಾಯಾಂಗ ಬಂಧನದಲ್ಲಿರುವುದನ್ನು ಪರಿಗಣಿಸಿದ ಮಾನ್ಯ ಉಚ್ಚ ನ್ಯಾಯಾಲಯದ ಸಲಹಾ ಮಂಡಳಿಯು (Advisory Board) ಅರ್ಜಿಯನ್ನು ಮಾನ್ಯ ಮಾಡಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಇದೇ ವೇಳೆ, ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಮಾನ್ಯ ಸೆಷನ್ಸ್ ನ್ಯಾಯಾಲಯವು ಮಂಜೂರು ಮಾಡಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಕ್ರಿಮಿನಲ್ ಅರ್ಜಿ ಸಲ್ಲಿಸಲಾಗಿದೆ. ಪ್ರಸ್ತುತ ಆರೋಪಿಗಳಿಗೆ ನೀಡಲಾಗಿರುವ ಜಾಮೀನಿಗೆ ತಡೆಯಾಜ್ಞೆ (Stay) ನೀಡಲಾಗಿದ್ದು, ಅರ್ಜಿಯ ವಿಚಾರಣೆ ಮಾನ್ಯ ನ್ಯಾಯಾಲಯದಲ್ಲಿ ಮುಂದುವರಿದಿದೆ.
ಹೀಗಾಗಿ, ಸರ್ಕಾರವೇ ಗೂಂಡಾ ಕಾಯ್ದೆಯನ್ನು ಹಿಂಪಡೆದಿದೆ ಎಂಬ ಮಾಹಿತಿ ತಪ್ಪಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು ನ್ಯಾಯಾಲಯದಲ್ಲಿ ಮುಂದುವರಿದಿವೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.


























