ವಿಟ್ಲ: ಇಲ್ಲಿನ ಮೇಗಿನಪೇಟೆ ನಿವಾಸಿ, ವಿಟ್ಲದ ಹಿರಿಯ ಧ್ವನಿವರ್ಧಕ ಸಂಸ್ಥೆಯಾದ ‘ಏರ್ ಸೌಂಡ್ಸ್’ ಮಾಲಕ ಇಬ್ರಾಹಿಮ್ (ಇಬ್ಬಚ್ಚ – 75) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವಿಟ್ಲ ಕೇಂದ್ರ ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದ ಇವರು, ಮಸೀದಿಯ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಇಬ್ರಾಹಿಮ್ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅಜಾತಶತ್ರುವಾಗಿ ಗುರುತಿಸಿಕೊಂಡಿದ್ದ ಅವರು, ಸಮಾಜದಲ್ಲಿ ಉತ್ತಮ ಬಾಂಧವ್ಯ ಹೊಂದಿದ್ದರು.
ಮೃತರು ಓರ್ವ ಪುತ್ರ ಹಾಗೂ ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಸ್ಥಳೀಯ ಗಣ್ಯರು, ವಿಟ್ಲ ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿ, ಕುಟುಂಬಸ್ಥರು ಹಾಗೂ ಹಿತೈಷಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.


























