ಬೆಂಗಳೂರು: ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.


ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ, ಮುರುಗೇಶ್ ನಿರಾಣಿ ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖ ನಾಯಕರುಗಳು ಹಾಗೂ ಬೊಮ್ಮಾಯಿ ಕುಟುಂಬಸ್ಥರು ಪಾಲ್ಗೊಂಡಿದ್ದರು. ಪ್ರಮಾಣ ವಚನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಂಪುಟ ರಚನೆಗೆ ಆಷಾಡ ಮುಗಿಯುವ ತನಕ ಕಾಯುವುದಿಲ್ಲ” ಎಂದಿದ್ದಾರೆ. ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದರು.




