ಮಂಗಳೂರು: ಮಂಗಳೂರು ನಗರದಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮರವೂರು ಸೇತುವೆ ಕುಸಿತಗೊಂಡಿದ್ದು, ಇದೀಗ ದುರಸ್ಥಿ ಕಾರ್ಯ ಪೂರ್ಣಗೊಂಡಿದೆ. ಜುಲೈ ೩೦ರ ಶುಕ್ರವಾರ ಮಧ್ಯಾಹ್ನದೊಳಗೆ ಸೇತುವೆ ಸಂಚಾರಕ್ಕೆ ಮುಕ್ತಗೊಳ್ಳುವ ಸಾಧ್ಯತೆ ಇದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.
ಮರವೂರು ಸೇತುವೆ ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ. ವಾಹನಗಳ ಪ್ರಾಯೋಗಿಕ ಓಡಾಟ ಯಶಸ್ವಿಯಾಗಿದೆ. ಘನ ವಾಹನಗಳನ್ನು ಸೇತುವೆ ಮೂಲಕ ಸಂಚರಿಸಿ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಘನ, ಲಘು ಎರಡೂ ಬಗೆಯ ವಾಹನ ಸಂಚಾರಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ. ನಾಳೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಚರ್ಚಿಸಿದ ಬಳಿಕ ಸಂಚಾರಕ್ಕೆ ಅವಕಾಶ ಸಿಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮರವೂರು ಸೇತುವೆ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸಾರ್ವಜನಿಕರು ಪರದಾಡುತ್ತಿದ್ದರು. ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರೂ ಕೂಡ ಸಂಕಷ್ಟ ಅನುಭವಿಸುತ್ತಿದ್ದರು. ಸುತ್ತು ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿತ್ತು. ಆದರೆ, ಇದೀಗ ಸಮಸ್ಯೆ ಪರಿಹಾರಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.