ವಿಟ್ಲ: ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ವ್ಯಾಪ್ತಿಯ ಕೇರಳ ಗಡಿ ಭಾಗದಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ನಾಳೆಯಿಂದ ಕೇರಳದಿಂದ ಕರ್ನಾಟಕ್ಕೆ ಆಗಮಿಸುವವರು ಕಡ್ಡಾಯವಾಗಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು ಎಂದು ದ.ಕ ಜಿಲ್ಲಾ ಪೊಲೀಸ್ ಮತ್ತು ವಿಟ್ಲ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.
ಈಗಾಗಲೇ ಜಿಲ್ಲಾಡಳಿತ ಕೊರೊನಾ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡು ಮತ್ತು ಮಂಗಳೂರು ನಡುವೆ ಬಸ್ ಸಂಚಾರವನ್ನು ಕೂಡಾ ಬಂದ್ ಮಾಡಿತ್ತು. ಎಲ್ಲಾ ಗಡಿಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿದೆ.
ಅದರಂತೆ ವಿಟ್ಲ ಪೊಲೀಸ್ ಠಾಣೆಯ ಕೇರಳ ಗಡಿ ಭಾಗವಾದ ಸಾರಡ್ಕ, ಬೆರಿಪದವು, ಕನ್ಯಾನ, ಸಾಲೆತ್ತೂರು ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ತಪಾಸಣೆ ತೀವ್ರಗೊಳಿಸಿದೆ. ಕೇರಳದಿಂದ ಬರುವವರು ಕಡ್ಡಾಯವಾಗಿ ನೆಗೆಟಿವ್ ವರದಿ ಹೊಂದಿರಬೇಕು. ಏಳು ದಿನಕ್ಕೊಮ್ಮೆ ಕೋವಿಡ್ ಪರೀಕ್ಷೆ ನಡೆಸಿ, ನೆಗೆಡಿವ್ ವರದಿ ಅಧಿಕಾರಿಗಳಿಗೆ ತೋರಿಸಬೇಕು. ವರದಿ ಇಲ್ಲದವರಿಗೆ ಪ್ರವೇಶ ನೀಡಲಾಗುವುದಿಲ್ಲ. ಹಾಗೂ ಎರಡು ಡೋಸ್ ಲಸಿಕೆ ಪಡೆದವರೂ ಕೂಡಾ ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ತಿಳಿಸಿದೆ.