ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ದತ್ತಾತ್ರೇಯ ಪೀಠದಲ್ಲಿ ಪೂಜೆ ಮಾಡಲು ಮುಜಾವರ್ ನೇಮಿಸಿದ್ದ ಆದೇಶವನ್ನ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು 2018ರ ಮಾರ್ಚ್ 19ರಂದು ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಎಂಬುವವರನ್ನ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಆದೇಶವನ್ನ ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವಧರ್ನಾ ಸಮಿತಿ ಅರ್ಜಿ ಸಲ್ಲಿಸಿತ್ತು. 2018ರ ಏಪ್ರಿಲ್ ತಿಂಗಳಿನಲ್ಲಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಕೆ ಆಗಿತ್ತು.
ಪ್ರಕರಣ ಕೋರ್ಟ್ ಮೆಟ್ಟಿಲೇರಿದ ಬಳಿಕ ‘ಅರ್ಜಿ ವಿಚಾರಣಾ ಹಂತದಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಮಾರ್ಚ್ 19ರ ಆದೇಶ ಸಂಬಂಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮುಚ್ಚಳಿಕೆಯನ್ನು ನೀಡಿತ್ತು. ಅದರಂತೆ ದತ್ತ ಪೀಠದ ಪೂಜಾ ವಿಧಿ ವಿಧಾನದ ಬಗ್ಗೆ ಆತುರದ ನಿರ್ಧಾರ ಬೇಡ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿತ್ತು.
ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಇಂದಿಗೆ ತೀರ್ಪನ್ನ ಕಾಯ್ದಿರಿಸಿತ್ತು. ಪ್ರಕರಣವನ್ನು ಹೊಸದಾಗಿ ಪರಿಗಣಿಸಿ, ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಿ ಎಂದು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ನೇತೃತ್ವದ ಪೀಠ ಆದೇಶ ಹೊರಡಿಸಿದೆ.




























