ಪುತ್ತೂರು: ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾದ ಪ್ರಕರಣದಲ್ಲಿ ಫೋಕ್ಸೋ ಕಾಯ್ದೆಯಡಿ ಬಂಧಿತನಾಗಿರುವ ಆರೋಪಿ
ಕುದ್ಕಾಡಿ ನಾರಾಯಣ ರೈ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದರಿಂದ ನ್ಯಾಯಾಲಯಕ್ಕೆ ಶರಣಾಗಿದ್ದ ಆರೋಪಿಯು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ತಿರಸ್ಕರಿಸಿತ್ತು. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಎರಡು ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿತ್ತು. ಈ ಮಧ್ಯೆ ಆರೋಪಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿ ಅವಧಿಯಲ್ಲಿಯೇ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಂತರ ಜಾಮೀನು ಅರ್ಜಿ ವಜಾಗೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿಯು ಜಾಮೀನು ಕೋರಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದೆ.
ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದ ಅವಧಿಯಲ್ಲಿ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆರೋಪಿ ನಾರಾಯಣ ರೈ ರನ್ನು ಪೊಲೀಸರು ನ.2ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯ ಜಾಮೀನು ಅರ್ಜಿ ವಜಾಗೊಂಡಿದ್ದರಿಂದಾಗಿ ಆರೋಪಿಯನ್ನು ನ.16ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸತೀಶ್ ಮತ್ತು ಇದೀಗ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಆರೋಪಿ ನಾರಾಯಣ ರೈ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.